ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಕಟ್ಟುನಿಟ್ಟಿನ ಸೂಚನೆ
ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿಗಾಗಿ ನೊಂದಣಿಯಾಗಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದು, ತರಬೇತಿ ಪಡೆದುಕೊಂಡಿರುವವರ ಸಂಖ್ಯೆ ಕ್ಷೀಣಿಸಿರುವ ಹಿನ್ನೆಲೆ, ನೋಂದಾಯಿತ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮೂಲಕ ತರಬೇತಿ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಿಸಲು ಕಟ್ಟುನಿಟ್ಟಿನ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ
ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆದುಕೊಳ್ಳಲು ಒಟ್ಟು 15,063 ಅಭ್ಯರ್ಥಿಗಳು ನೊಂದಾಯಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಹೆಚ್ಚಾಗುತ್ತಿದ್ದು, ವಿವಿಧ ವೃತ್ತಿಪರ ತರಬೇತಿಗಳನ್ನು ನೀಡಿದಾಗ ಮಾತ್ರ ಉದ್ಯೋಗ ಕಲ್ಪಿಸಿಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿ ನೀಡಲು ಸಮರ್ಪಕ ತರಬೇತಿ ಕೇಂದ್ರಗಳ ಅವಶ್ಯಕತೆ ಇದ್ದು, ತರಬೇತಿ ಕೇಂದ್ರಗಳನ್ನು ಗುರುತಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 22 ಐ.ಟಿ.ಐ ಸಂಸ್ಥೆಗಳಿದ್ದು, ಈ ಪೈಕಿ 5 ಸರ್ಕಾರಿ ಐಟಿಐ ಸಂಸ್ಥೆಗಳು ಹಾಗೂ 17 ಖಾಸಗಿ ಐ.ಟಿ.ಐ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಸಿಬ್ಬಂದಿ ಕೊರತೆಯಿಂದ ಸಂಸ್ಥೆಗಳಲ್ಲಿ ತರಬೇತಿ ಕಾರ್ಯ ಪ್ರಗತಿಯಲ್ಲಿರದ ಹಿನ್ನೆಲೆ, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ವಹಿಸಿ ಐಟಿಐ ಸಂಸ್ಥೆಗಳಲ್ಲಿ ತರಬೇತಿ ನೀಡಲು ಕ್ರಮವಹಿಸಲಾಗುವುದು ಎಂದರು.
ಕೈಗಾರಿಕಾ ಸಂಸ್ಥೆಗಳ ಜೊತೆ ಚರ್ಚಿಸಿ ಅವಶ್ಯವಿರುವ ಕಡೆ ತರಬೇತಿಯನ್ನು ಕಲ್ಪಿಸಿ, ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡಬೇಕು ಎಂದರಲ್ಲದೆ, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ತರಬೇತಿ ಸಂಸ್ಥೆಗಳು ತರಬೇತಿಗಾಗಿ ರಚಿಸಿರುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿ, ಕೌಶಲ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕೃಷಿ, ಕೈಗಾರಿಕೆ, ಸಮಾಜ ಕಲ್ಯಾಣ, ಪಶು ಸಂಗೋಪನೆ ಹಾಗೂ ಇನ್ನಿತರ ಇಲಾಖೆಗಳು ವಿವಿಧ ತರಬೇತಿಗಳನ್ನು ನೀಡುತ್ತಿದ್ದು, ಕೌಶಲ್ಯ ಕರ್ನಾಟಕ ಯೋಜನೆಯಡಿ ಮತ್ತಷ್ಟು ತರಬೇತಿಗಳನ್ನು ನೀಡಿ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪ್ರತಿಯೊಂದು ಇಲಾಖೆಯ ಸಮನ್ವಯತೆ, ಸಹಕಾರದಿಂದ ಈ ಯೋಜನೆ ಯಶಸ್ವಿ ಆಗಲು ಸಾಧ್ಯವಾಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ತರಬೇತಿ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.