ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್
ಬೆಂಗಳೂರು ಗ್ರಾಮಾಂತರ ಜಿಲ್ಲೆ ಜುಲೈ 19 ,ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಎರಡನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದಲ್ಲಿ ಪ್ರತಿ ಮೂರು ಮಾಹೆಗೊಮ್ಮೆ ವರ್ಷದಲ್ಲಿ ಒಟ್ಟು ನಾಲ್ಕು ಸಭೆಗಳನ್ನು ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ, ಉಪ ವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆ ಯಲ್ಲಿ ನಿಗದಿತ ಸಮಯಕ್ಕೆ ಸಭೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
2023ರ ಮಾರ್ಚ್ ಮಾಹೆಯಿಂದ ಜೂನ್ ಮಾಹೆಯ ಅಂತ್ಯದವರೆಗೆ ಒಟ್ಟು 32 ಜನ ಸಂತ್ರಸ್ತರಿಗೆ ರೂ 10,22,500/- ಗಳ ಪರಿಹಾರ ಧನವನ್ನು ದೌರ್ಜನ್ಯ ಪ್ರಕರಣದ ಕಾಯ್ದೆ ಅಡಿಯಲ್ಲಿ ಮಂಜೂರು ಮಾಡಲಾಗಿದೆ. 2023 ನೇ ವರ್ಷದಲ್ಲಿ ದಾಖಲಾದ 28 ಪ್ರಕರಣಗಳ ಪೈಕಿ 4 ಪ್ರಕರಣಗಳಿಗೆ ಪರಿಹಾರ ಧನ ಮಂಜೂರು ಮಾಡಲು ಬಾಕಿ ಇದೆ ಹಾಗೂ 25 ಪ್ರಕರಣಗಳಿಗೆ ಚಾರ್ಜ್ ಶೀಟ್ ಸಲ್ಲಿಸಲು ಬಾಕಿ ಇದೆ ಎಂದು ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶ್ರೀನಿವಾಸ್.ಎಂ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರು, ಸಂಬಂಧಪಟ್ಟ ಜಿಲ್ಲಾಮಟ್ಟದ ಅಧಿಕಾರಿಗಳು, ಡಿ. ವೈ.ಎಸ್.ಪಿ ಗಳು, ತಹಶೀಲ್ದಾರ್ ಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.