ಜೂನ್. 21 ರಂದು ಸರ್ಕಾರಿ ನೌಕರರ ಕ್ರೀಡಾಕೂಟ: ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, 2023-24 ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂನ್. 21 ರಂದು ಹೊಸಕೋಟೆಯ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲು ನಿಗದಿಪಡಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ನಡೆದ 2023-24ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜೂನ್. 21 ರಂದು ಹೊಸಕೋಟೆ ಟೌನ್ ನಲ್ಲಿರುವ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲು ನಿರ್ಧರಿಸಲಾಗಿದೆ, ಕ್ರೀಡಾಕೂಟದಲ್ಲಿ ಕ್ರೀಡಾ ಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮವಹಿಸಿ ಎಂದರು.
ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಸೇವೆ, ಕ್ರೀಡಾಪಟುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ತಾಲ್ಲೂಕು ಮಟ್ಟದಲ್ಲಿ ಎಸಿ, ತಹಶೀಲ್ದಾರ್, ಕಾರ್ಯ ನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಹಾಗೂ ಶಿಷ್ಟಾಚಾರದಂತೆ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಸಿ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಹೊಸಕೋಟೆ ತಹಶೀಲ್ದಾರ್ ವಿಜಯ್ ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಟಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು, ದೈಹಿಕ ಶಿಕ್ಷಣ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.