ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 27 ರಂದು ಜಿಲ್ಲೆಯ ಮೂರು ಪ್ರಮುಖ ಸ್ಥಳಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ಟೌನ್ ನಲ್ಲಿರುವ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ದೇವನಹಳ್ಳಿಯ ಪ್ರಮುಖ ಮೂರು ಸ್ಥಳಗಳಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಪುತ್ಥಳಿಗೆ ಬೆಳಗ್ಗೆ 07.30 ಕ್ಕೆ ಮಾಲಾರ್ಪಣೆ ಮಾಡಲಾಗುವುದು.
ನಂತರ ನಾಡಪ್ರಭು ಕೆಂಪೇಗೌಡರ ಹುಟ್ಟೂರಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಲ್ಲಿ ಬೆಳಿಗ್ಗೆ 08:00 ಗಂಟೆಗೆ ಜ್ಯೋತಿ ಬೆಳಗಿಸಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಕಳುಹಿಸಿಕೊಡಲಾಗುವುದು.
ಬೆಳಗ್ಗೆ 09.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಹಾಗೂ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ನಾಡಪ್ರಭು ಕೆಂಪೇಗೌಡರು ಎಲ್ಲಾ ವರ್ಗದವರನ್ನು ಒಳಗೊಂಡು ಬೆಂಗಳೂರು ನಿರ್ಮಿಸಿದ್ದಾರೆ. ಹಾಗಾಗಿ ಎಲ್ಲಾ ವರ್ಗದ ಜನರನ್ನು ಒಳಗೊಂಡಂತೆ ಪಕ್ಷಾತೀತವಾಗಿ, ಜಾತ್ಯತೀತವಾಗಿ ಆಚರಣೆ ಮಾಡಬೇಕಿದೆ. ಸಂಘ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು, ಸ್ತಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಮುಖಂಡರು ಸಾರ್ವಜನಿಕರನ್ನು ಕರೆ ತರಲು ಬಸ್ ವ್ಯವಸ್ಥೆ ಕಲ್ಪಿಸಿ. ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ ವ್ಯವಸ್ಥೆ, ಮೂಲಭೂತ ಸೌಕರ್ಯ, ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಲಾ ತಂಡಗಳ ವ್ಯವಸ್ಥೆಯನ್ನು ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ) ಅಧ್ಯಕ್ಷ ಶಾಂತಕುಮಾರ್ , ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.