ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯಿಂದ ನಂದಿ ಕ್ರಾಸ್ ವರೆಗೆ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡು ಅವರು ಮಾತನಾಡಿದರು.
ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಿಂದ ದೇವನಹಳ್ಳಿ ತಾಲ್ಲೂಕಿನ ನಂದಿ ಕ್ರಾಸ್ ವರೆಗೂ ಮಾನವ ಸರಪಳಿ ನಿರ್ಮಿಸಲಾಗುವುದು. ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದ್ದು, ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ಥಳೀಯ ಮುಖಂಡರು ಜನ ಪ್ರತಿನಿಧಿಗಳು ಅಗತ್ಯ ಕ್ರಮವಹಿಸಿ ಎಂದರು.
ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾತನಾಡಿ, ಅಂದಾಜು 100 ಕಿ.ಮೀ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಲು ಕ್ರಮವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಾನವ ಸರಪಳಿ ನಿರ್ಮಾಣಕ್ಕೆ 80 ಸಾವಿರ ಜನರು ಭಾಗವಹಿಸಬೇಕಾಗಿದೆ. ಬೆಳಿಗ್ಗೆ 8-30 ಗಂಟೆಯಿಂದ 9 ಗಂಟೆ ಮಾನವ ಸರಪಳಿ ರಚನೆ ನಡೆಯಲಿದ್ದು, ನಂತರದಲ್ಲಿ ಸಂವಿಧಾನ ಪೀಠಿಕೆ ವಾಚನ ಮಾಡುವ ಕೆಲಸವಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸ್ಥಳೀಯ ಆಡಳಿತದ ನೆರವಿನಿಂದ ‘ಪ್ರಜಾಪ್ರಭುತ್ವ ದಿನ’ವನ್ನು ಹಬ್ಬದಂತೆ ಆಚರಿಸಲಾಗುತ್ತದೆ.
ಸ್ವಯಂಪ್ರೇರಿತವಾಗಿ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಕೆ.ಎನ್ ಅನುರಾಧ ಮಾತನಾಡಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಪ್ರಜಾಪ್ರಭುತ್ವ ದಿನದಂದು ಹಮ್ಮಿಕೊಂಡಿರುವ ಮಾನವ ಸರಪಳಿಯಲ್ಲಿ ಸಾರ್ವಜನಿಕರು ಭಾಗವಹಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್, ಎಸ್ಪಿ ಸಿ.ಕೆ ಬಾಬಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮಾ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.